ಕೆ.ಸಿ.ರಾಮಮೂರ್ತಿ ಅವಿರೋಧವಾಗಿ ರಾಜ್ಯಸಭೆಗೆ ಆಯ್ಕೆ
ಬೆಂಗಳೂರು: ಕಾಂಗ್ರೆಸ್ ಹಾಗೂ ರಾಜ್ಯಸಭೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಇತ್ತೀಚೆಗೆ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಯಾಗಿದ್ದ ಕೆ.ಸಿ.ರಾಮಮೂರ್ತಿ ಅವರು 2019 ಡಿಸೆಂಬರ್ 05ರ ಗುರುವಾರ
ಅವಿರೋಧವಾಗಿ ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾದರು.
ಡಿಸೆಂಬರ್ ೧೨ರಂದು ರಾಜ್ಯಸಭೆಗೆ ಚುನಾವಣೆ ನಡೆಯಬೇಕಾಗಿತ್ತು. ಆದರೆ, ಚುನಾವಣೆಗೂ ಮುನ್ನವೇ ಬಿಜೆಪಿ ಅಭ್ಯರ್ಥಿಯಾಗಿದ್ದ ಕೆ.ಸಿ.ರಾಮಮೂರ್ತಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ವಿಧಾನಸಭಾ ಕಾರ್ಯದರ್ಶಿ ಎಂಕೆ ವಿಶಾಲಾಕ್ಷಿ ಘೋಷಿಸಿದರು.
ಕೆ.ಸಿ. ರಾಮಮೂರ್ತಿ ಹೊರತುಪಡಿಸಿ ಬೇರೆ ಯಾರೂ ಕೂಡ ನಾಮಪತ್ರ ಸಲ್ಲಿಸಿರಲಿಲ್ಲ. ಹೀಗಾಗಿ ಪ್ರತಿಸ್ಪರ್ಧಿಯಾಗಿ ಯಾವ ಅಭ್ಯರ್ಥಿಗಳು ಇಲ್ಲದ ಕಾರಣ ಅಂತಿಮವಾಗಿ ಕೆ ಸಿ ರಾಮಮೂರ್ತಿ ಅವರು ಅವಿರೋಧವಾಗಿ ಆಯ್ಕೆಯಾದರು.
ಅವಿರೋಧವಾಗಿ ಆಯ್ಕೆ ಆಗುತ್ತಿದ್ದಂತೆಯೇ ಕೆ.ಸಿ. ರಾಮಮೂರ್ತಿ ಅವರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದರು.
ಬಳಿಕ ಮಾತನಾಡಿದ ಕೆ.ಸಿ. ರಾಮಮೂರ್ತಿ ಅವರು, ಅವಿರೋಧ ಆಯ್ಕೆ ಮಾಡಿದ್ದಕ್ಕಾಗಿ ಎಲ್ಲರಿಗೂ ಧನ್ಯವಾದ ಸಲ್ಲಿಸಿದರು. ’ಬಿಜೆಪಿ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರಿಗೆ ಧನ್ಯವಾದ ಸಲ್ಲಿಸುತ್ತೇನೆ. ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಮೋದಿ ಅವರ ಅಭಿವೃದ್ಧಿ ಕಾರ್ಯಕ್ರಮಗಳಿಂದ ಆಕರ್ಷಿತನಾಗಿ ನಾನು ಬಿಜೆಪಿಗೆ ಬಂದೆ. ದೇಶಕ್ಕಾಗಿ ಇನ್ನಷ್ಟು ಉತ್ತಮ ಕೆಲಸ ಮಾಡುತ್ತೇವೆ. ನನಗೆ ಯಾವುದೇ ಬೇಸರ ಇಲ್ಲ. ಮೊದಲು ನಾನು ಬಿಜೆಪಿ ಸ್ನೇಹಿತರ ಜೊತೆ ಚೆನ್ನಾಗಿದ್ದೆ. ಈಗ ಅವರ ಜೊತೆಯಲ್ಲಿ ಕೆಲಸ ಮಾಡುತ್ತೇನೆ. ಪಕ್ಷ ಬಿಡುವಾಗ ಡಿ ಕೆ ಶಿವಕುಮಾರ್ ಅವರಿಗೆ ಹೇಳಬೇಕು ಅಂತೇನಿಲ್ಲ. ಅವರಿಗೆ ಗೊತ್ತಾಗಿರುತ್ತದೆ ಎಂದು ಹೇಳಿದರು.
ಬೆಂಗಳೂರು ನಿವಾಸಿಯಾಗಿರುವ ಕೆ.ಸಿ.ರಾಮಮೂರ್ತಿ ಅವರು ಮಾಜಿ ಐಪಿಎಸ್ ಅಧಿಕಾರಿ, ಸಿಎಆರ್- ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಬೆಂಗಳೂರು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್, ಯುವಜನ ಸೇವೆ, ಸಂಚಾರ ಮತ್ತು ರಸ್ತೆ ಸುರಕ್ಷತೆಯ ಆಯುಕ್ತರು, ಬೆಂಗಳೂರು ಸಂಚಾರ ವಿಭಾಗದ ಹೆಚ್ಚುವರಿ ಆಯುಕ್ತರಾಗಿ ಸೇವೆ ಸಲ್ಲಿಸಿದ್ದಾರೆ. ಅವರನ್ನು ಕಾಂಗ್ರೆಸ್ ಪಕ್ಷವು ೨೦೧೬ರಲ್ಲಿ ಕರ್ನಾಟಕದಿಂದ ರಾಜ್ಯಸಭೆಗೆ ಮೊದಲ ಬಾರಿಗೆ ಆಯ್ಕೆ ಮಾಡಿತ್ತು. ಇದೀಗ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಬಳಿಕ ಎರಡನೇ ಬಾರಿಗೆ ರಾಜ್ಯಸಭೆಗೆ ಆಯ್ಕೆಯಾದರು.
No comments:
Post a Comment